ನವದೆಹಲಿ: ಇಂದು ರಾಜ್ಯಸಭೆಯಲ್ಲಿ “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರದ ಪ್ರಗತಿಯ ಮೇಲೆ ಭಾರತೀಯ ಸಂವಿಧಾನದ ಪರಿವರ್ತಕ ಪರಿಣಾಮವನ್ನು ಒತ್ತಿ ಹೇಳಿದರು. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ಪಕ್ಷವು ತಮ್ಮ ಅಧಿಕಾರಾವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದೆ ಮತ್ತು ಜನರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ತನ್ನ ಹಿತಾಸಕ್ತಿಗಳಿಗೆ ಸರಿಹೊಂದುವಂತೆ ಸಂವಿಧಾನವನ್ನು ತಿದ್ದುಪಡಿ ಮಾಡಿದೆ ಎಂದಿರುವ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಭಾರತೀಯ ಸಂವಿಧಾನದ ಖಾಲಿ ಪ್ರತಿಗಳನ್ನು ಒಯ್ಯುತ್ತಿದ್ದಾರೆ. ಇದು ಜನರಿಗೆ ಮತ್ತು ದೇಶಕ್ಕೆ ಮಾಡಿದ ದೊಡ್ಡ ವಂಚನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.


 
		 
		 
		
 
		
 
    