ಚಿಕ್ಕಬಳ್ಳಾಪುರ : ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಹೆಚ್.ಎನ್ ವ್ಯಾಲಿಯ ಎರಡನೇ ಹಂತದ ಸಂಸ್ಕರಿಸಿದ ನೀರು ತುಂಬಿಸುವ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಸೂಚನೆ ನೀಡಿದರು.
ಬಾಗೇಪಲ್ಲಿ, ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿನ ಕೆರೆಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ವೆಂಕಟಗಿರಿಕೋಟೆ ಕೆರೆ, ಕಂದವಾರ ಕೆರೆ ಹಾಗೂ ಪೂರ್ಣಸಾಗರ ಕೆರೆ ಬಳಿ ನಡೆಯುತ್ತಿರುವ ಪಂಪ್ ಹೌಸ್ ಕಾಮಗಾರಿ ವೀಕ್ಷಿಸಿದರು.ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ದಿಗೊಳಿಸುವ ನಿಟ್ಟಿನಲ್ಲಿ ಸಂಸ್ಕರಿಸಿದ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಲಾಗಿದೆ.
ಹೆಚ್ಎನ್ ವ್ಯಾಲಿಯಿಂದ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದಿನ ಬಾರಿ ಭೇಟಿ ನೀಡಿದಾಗ ನೀಡಿದ್ದ ಸೂಚನೆಯನ್ನ ಅನುಷ್ಠಾನಗೊಳಿಸದೇ ಇರುವ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗೋಪಾಲ್ ಅವರನ್ನ ಸಚಿವರು ತರಾಟೆಗೆ ತಗೆದುಕೊಂಡರು. ಕಾಮಗಾರಿ ಪೂರ್ಣಗೊಳಿಸಲು ಇರುವಂತಹ ತೊಡಕುಗಳನ್ನ ನಿವಾರಿಸುವುದು ಅಧಿಕಾರಿಗಳ ಕರ್ತವ್ಯ. ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವುದಾಗಿ ಸೂಚನೆ ನೀಡಿದರು.
ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಗುಣಮಟ್ಟ ಪರಿಶೀಲನೆಯ ಅಧಿಕಾರಿಗಳು ನಿಗಾ ವಹಿಸಬೇಕು. ಕಾಮಗಾರಿ ಪೂರ್ಣಗೊಂಡು ಬಿಲ್ ನೀಡುವುದಕ್ಕೂ ಮುನ್ನ ಥರ್ಡ್ ಪಾರ್ಟಿ ಇನ್ಸ್ಪೆಕ್ಷನ್ ಕಡ್ಡಾಯ ಎಂದು ಸಚಿವರು ತಿಳಿಸಿದರು.ಈ ಸಂದರ್ಭದಲ್ಲಿ ಇಲಾಖೆಯ ದಕ್ಷಿಣವಿಭಾಗದ ಸೂಪರಿಂಟೆಂಡೆಂಟ್ ಇಂಜಿನೀ ಯರ್ ಸಂಜೀವ್ ರಾಜು, ಕಾರ್ಯಪಾಲಕ ಅಭಿಯಂತರರಾದ ವಿಷ್ಣು ಕಾಮತ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.ಇದೇ ವೇಳೆ, ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.