ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ.
ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.
ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡಬೇಕು ಮತ್ತು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ನೀರಜ್ ಡಾಂಗಿ, ತಮ್ಮ ಹೇಳಿಕೆಗೆ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದರು.
“ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದು ಒಂದು ಫ್ಯಾಶನ್ ಆಗಿದೆ ಎಂದು ಟೀಕಿಸಿದ್ದಾರೆ. ಇದು ದೇಶದ ದಲಿತರು ಮತ್ತು ಬಾಬಾಸಾಹೇಬರಿಗೆ ಮಾಡಿದ ಅವಮಾನವಾಗಿದೆ” ಎಂದು ಅವರು ಹೇಳಿದ್ದಾರೆ.
ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಅಮಿತ್ ಶಾ ಇಡೀ ದೇಶಕ್ಕೆ ತೋರಿಸಿದ್ದಾರೆ ಎಂದರು.
ಬಿಜೆಪಿ ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದು, ಇದೇ ವರ್ಗದವರು ಅವರನ್ನು 240ರಿಂದ 40ಕ್ಕೆ ಇಳಿಸಲಿದ್ದಾರೆ ಎಂದು ಡಾಂಗಿ ಹೇಳಿದರು.
“ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಅವರು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ ಅವರು ಸಾಂವಿಧಾನಿಕ ಹುದ್ದೆ ಅಲಂಕರಿಸುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ” ಎಂದು ಡಾಂಗಿ ಹೇಳಿದರು.