ಬೆಂಗಳೂರು: ಅತ್ಯಾಚಾರದ ಆರೋಪದಡಿ ಉದ್ಯಮಿ ಹಾಗೂ ಬಿಜೆಪಿ, ಜೆಡಿಎಸ್ ಮಾಜಿ ಮುಖಂಡ ಸೋಮಶೇಖರ್ ಜಯರಾಜ್ (ಜಿಮ್ ಸೋಮ) ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ 26 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನನ್ವಯ ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸಕಲೇಶಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೋಮಶೇಖರ್ ಪರಾಜಿತಗೊಂಡಿದ್ದರು.
ದೂರುದಾರಳಿಗೆ ಆಕೆಯ ಸ್ನೇಹಿತೆಯೊಬ್ಬಳ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಮದುವೆ ನಿಗದಿಯಾಗಿತ್ತು. ಹೀಗಾಗಿ 6 ಲಕ್ಷ ರೂ. ಆರ್ಥಿಕ ಸಹಾಯ ಮಾಡುವಂತೆ ಸೋಮಶೇಖರ್ ಬಳಿ ದೂರುದಾರೆ ಕೇಳಿಕೊಂಡಿದ್ದರು. ಕಳೆದ ವರ್ಷ ಅಕ್ಟೋಬರ್ನಲ್ಲಿ ದೂರುದಾರಳ ಪಿಜಿ ಬಳಿ ಹೋಗಿದ್ದ ಸೋಮಶೇಖರ್, ಹಣ ಕೊಡುವುದಾಗಿ ಆಕೆಯನ್ನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ತಮ್ಮ ಫ್ಲ್ಯಾಟ್ಗೆ ಕರೆದೊಯ್ದಿದ್ದರು. ಅಲ್ಲಿ ದೂರುದಾರಳ ಇಚ್ಛೆಗೆ ವಿರುದ್ಧವಾಗಿ ಮದ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ ನಡೆದ ವಿಚಾರವನ್ನು ಯಾರಿಗಾದರೂ ಹೇಳಿದರೆ ಪ್ರಾಣಹಾನಿ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.
ದೂರಿನನ್ವಯ ಅಶೋಕನಗರ ಠಾಣೆ ಪೊಲೀಸರು ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಸೋಮಶೇಖರ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.