ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಇಷ್ಟು ದಿನ ಅದಾನಿ ಅವರನ್ನು ರಕ್ಷಣೆ ಮಾಡಿಕೊಂಡು ಬಂದಿದ್ದು, ಈಗಲಾದರೂ ದೇಶದ ಗೌರವ ಉಳಿಸಲು ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ಆಗ್ರಹಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ 7-8 ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ಈ ವಿಚಾರವಾಗಿ ಕ್ರಮ ಕೈಗೊಂಡಿಲ್ಲ. ಈ ವಿಚಾರ ಸಂಸತ್ತಿನಿಂದ ಬೀದಿಗಳ ವರೆಗೂ ಚರ್ಚೆಯಾಯಿತು. ಇದೀಗ ಗ್ರೀನ್ ಎನರ್ಜಿ ಯೋಜನೆಯಲ್ಲಿ ಆಗಿರುವ ಅಕ್ರಮದ ಬಗ್ಗೆ ಅಮೆರಿಕಾ ನ್ಯಾಯಾಲಯ ಆದೇಶ ನೀಡಿದ್ದು, ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ಭಾಗಿಯಾದವರನ್ನು ಕಾನೂನು ಚೌಕಟ್ಟಿನಲ್ಲಿ ತರಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ಸೇರಿದಂತೆ ವಿರೋಧ ಪಕ್ಷಗಳ ನಾಯಕರುಗಳನ್ನು ಬಂಧಿಸುವ ಕೇಂದ್ರ ಸರ್ಕಾರ ಇದೀಗ ಅದಾನಿ ಅವರನ್ನು ಬಂಧಿಸಿ ದೇಶದ ಮರ್ಯಾದೆ ಉಳಿಸಬೇಕೆಂದು ಆಗ್ರಹಿಸಿದರು.