ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ.
ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ವಿಷಯ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಡಿಸೆಂಬರ್ 9 ರಂದು ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ತಿಮ್ಮಾಪುರ್ ಅವರ ಖಾತೆಯನ್ನು ಬೇರೆಯವರಿಗೆ ನೀಡುವ ಸಾಧ್ಯತೆಯಿದೆ ಅಥವಾ ಅದಕ್ಕಿಂತ ಮುಂಚೆಯೇ ಅದು ಬದಲಾವಣೆಯಾಗಬಹುದು ಎಂದು ಹೇಳಲಾಗುತ್ತಿದೆ.
ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಈ ಹಿಂದೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಿ ಅಹೋರಾತ್ರಿ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆದರು. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ ನಾಯಕರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಸಂಗ್ರಹವಾದ ಹಣವನ್ನು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ. ಆದರೆ, ರಾಜ್ಯದ ಕಾಂಗ್ರೆಸ್ ನಾಯಕರು ಬಿಜೆಪಿಯ ಆರೋಪಗಳನ್ನು ನಿರಾಧಾರ ಎಂದು ತಳ್ಳಿಹಾಕಿದ್ದಾರೆ.