ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಪಾಲ್ಗೊಳ್ಳುವ ಸಾಧ್ಯತೆಯಿದೆ. 73 ವರ್ಷದ ಮಾಜಿ ಸೇನಾ ಜನರಲ್ ಪ್ರಬೊವೊ ಸುಬಿಯಾಂಟೊ ಅವರು 2024ರ ಅಕ್ಟೋಬರ್ ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಭಾರತ ಭೇಟಿ ಬಳಿಕ ಅವರು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ಯೋಜಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು. ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯನ್ನು ಭಾರತ ಇನ್ನೂ ಔಪಚಾರಿಕವಾಗಿ ಘೋಷಿಸಿಲ್ಲ.
ಇಂಡೋನೇಷ್ಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ವರ್ಷ ಭಾರತವು ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ವಿಶ್ವ ನಾಯಕರನ್ನು ಆಹ್ವಾನಿಸುತ್ತದೆ. ಕಳೆದ ವರ್ಷ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿದ್ದರು.2023ರಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್ -ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. COVID-19 ಸಾಂಕ್ರಾಮಿಕದ ದೃಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಯಾರೂ ಪಾಲ್ಗೊಂಡಿರಲಿಲ್ಲ.