ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮೂರು ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮದವರೊಂದಿಗೆ ಇಂದು ಮಾತನಾಡಿ, ಈಗಾಗಲೇ ಪಕ್ಷದ ವತಿಯಿಂದ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಭೆಗಳನ್ನು ನಡೆಸಲಾಗಿದೆ.
ಇಂದು ತಾವು ಮತ್ತು ಮುಖ್ಯಮಂತ್ರಿಯವರು ಸಮಾಲೋಚನೆ ನಡೆಸಿ ಕೇಂದ್ರದ ವರಿಷ್ಠರಿಗೆ ವರದಿಯನ್ನು ಕಳುಹಿಸಲಿದ್ದೇವೆ. ವರಿಷ್ಠರ ಸೂಚನೆಯಂತೆ ಅಭ್ಯರ್ಥಿಗಳ ಆಯ್ಕೆ ಆಗಲಿದೆ. ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷವೇ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.ಮತ್ತೊಂದೆಡೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಶತಾಯಗತಾಯ ಪ್ರಯತ್ನ ನಡೆಸಿದ್ದು, ಇಂದು ತಮ್ಮ ಬೆಂಬಲಿಗರ ಸಭೆ ನಡೆಸಲು ಮುಂದಾಗಿದ್ದಾರೆ.ಪಕ್ಷದ ವತಿಯಿಂದ ತಮಗೆ ಟಿಕೆಟ್ ದೊರೆಯದೇ ಹೋದರೆ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಲು ಅವರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಲವು ಹೊಂದಿರುವ ಕೇಂದ್ರ ಸಚಿವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ಷೇತ್ರದಿಂದ ತಮ್ಮ ಪುತ್ರನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕೆಂಬ ನಿಲುವು ತಾಳಿದ್ದು ಇದು ಎಷ್ಟರ ಮಟ್ಟಿಗೆ ಸಾಧ್ಯ ವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ತಮ್ಮ ಪುತ್ರ ಭರತ್ ಬೊಮ್ಮಾಯಿ ಅವರನ್ನು ಚುನಾವಣೆಗೆ ನಿಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಂಡೂರು ಕ್ಷೇತ್ರ ಮಾತ್ರ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದು, ಇಲ್ಲಿಂದ ಎನ್ಡಿಎ ಅಭ್ಯರ್ಥಿ ಯಾರು ಎಂಬುದು ಕುತೂಹಲದ ವಿಷಯವಾಗಿದೆ.ಮೂರು ಕ್ಷೇತ್ರಗಳಲ್ಲಿ ಮತದಾನ ನವೆಂಬರ್ 13ಕ್ಕೆ ನಡೆಯಲಿದ್ದು, 23ಕ್ಕೆ ಫಲಿತಾಂಶ ಹೊರಬೀಳಲಿದೆ.