ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಹಿರಿಯ ರಾಜಕೀಯ ಮುತ್ಸದ್ದಿ ಎಸ್.ಎಂ.ಕೃಷ್ಣ(93) ಅಸ್ತಂಗತರಾಗಿದ್ದಾರೆ.ಮಧ್ಯರಾತ್ರಿ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ.
ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸದಾಶಿವನಗರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು 1932ರ ಮೇ1ರಂದು ಜನಿಸಿದ್ದರು. ಓರ್ವ ದೂರದೃಷ್ಟಿಯುಳ್ಳ ಮುತ್ಸದ್ಧಿ ರಾಜಕಾರಣಿ ಮತ್ತು ಆಡಳಿತಗಾರ ಎಂದರೆ ಅತಿಶಯೋಕ್ತಿ ಆಗಲಾರದು. 1999ರಿಂದ 2004ರವರೆಗೆ ರಾಜ್ಯದ 10ನೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.
ಇವರ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಬೃಹತ್ತಾಗಿ ಬೆಳೆಯಿತು. 2009ರಿಂದ 2012ರವರೆಗೆ ಕೇಂದ್ರದಲ್ಲಿ ವಿದೇಶಾಂಗ ವ್ಯವಹಾರ ಸಚಿವರಾಗಿ ಸೇವೆ ಸಲ್ಲಿಸಿದ್ದರು.2004ರಿಂದ 08ರವರೆಗೆ ಮಹರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. 89ರಿಂದ 93ರವರೆಗೆ ರಾಜ್ಯ ವಿಧಾನಸಭೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ 1971ರಿಂದ 2014ರವರೆಗೆ ವಿವಿಧ ವೇಳೆ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಆಗಿದ್ದರು.
23ರಲ್ಲಿ ಇವರಿಗೆ ಭಾರತದ ಅತ್ಯುತ್ತನ್ನತ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೊಟ್ಟ ಮೊದಲಿಗೆ 1962ರಲ್ಲಿ ಮಂಡ್ಯ ಜಿಲ್ಲೆ ಮದ್ದೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ವಿಧಾನಸಭೆ ಪ್ರವೇಶಿಸುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು.
80ರಲ್ಲಿ ಲೋಕಸಭೆಗೆ ಆಯ್ಕೆಯಾದರು.
83-84ರನಡುವೆ ಇಂದಿರಾಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.85ರಲ್ಲಿ ಕರ್ನಾಟಕ ವಿಧಾನಸಭೆಗೆ ಮರು ಆಯ್ಕೆಯಾಗಿ 89-93ರನಡುವೆ ಸ್ಪೀಕರ್ ಮತ್ತು 93-94ರವರೆಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು.ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಾಂಚಜನ್ಯದ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡಿ 99ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು.