ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫ್ರಾಂಚೈಸಿ ಸಾಮಾಜಿಕ ಜಾಲತಾಣದಲ್ಲಿ ಹಿಂದಿ ಪೇಜ್ ಆರಂಭಿಸಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಕಿಡಿಕಾರಿದ್ದಾರೆ. ಹಿಂದಿ ಗುಲಾಮಗಿರಿಯನ್ನು ಹೇರುವುದು ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಟಿ ಎ ನಾರಾಯಣ ಗೌಡ, ” ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ ” ಎಂದಿದ್ದಾರೆ.