ಗುವಾಹಟಿ: ಶಾಲಾ ಸಮಯದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಓವರ್ ಹೆಡ್ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಮೂವರು ಖಾಸಗಿ ಶಾಲೆ ಮಕ್ಕಳು ಸಾವನ್ನಪ್ಪಿದ್ದು, ಇತರ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಶನಿವಾರ ನಡೆದಿದೆ. ಪಾಪಮ್ ಪಾರೆ ಜಿಲ್ಲೆಯ ನಹರ್ಲಗುನ್ನಲ್ಲಿರುವ ಸೇಂಟ್ ಅಲ್ಫೋನ್ಸಾ ಶಾಲೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಂಬಂಧ ಶಾಲೆಯ ಕಟ್ಟಡದ ಮಾಲೀಕರು, ಪ್ರಾಂಶುಪಾಲರು ಮತ್ತು ನಾಲ್ವರು ವಾರ್ಡನ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೃತರೆಲ್ಲರೂ 9 ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಹರ್ಲಾಗುನ್ನಲ್ಲಿರುವ ಟೊಮೊ ರಿಬಾ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣರಾದ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಮತ್ತಿತರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಲಾಗಿದೆ. ಈ ದುರಂತದ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವುದರಿಂದ ಸಾರ್ವಜನಿಕರು ಶಾಂತಿ ಕಾಪಾಡಿಕೊಳ್ಳಬೇಕೆಂದು ನಹರ್ಲಾಗುನ್ ಪೊಲೀಸ್ ಅಧೀಕ್ಷಕ ಮಿಹಿನ್ ಗ್ಯಾಂಬೊ ಮನವಿ ಮಾಡಿದ್ದಾರೆ. ಮತೃರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಂತ್ರಸ್ತರ ಕುಟುಂಬಗಳಿಗೆ ನ್ಯಾಯವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎರಡು ದೂರುಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ರಿಷಿ ಲಾಂಗ್ಡೊ ಮಾಧ್ಯಮಗಳಿಗೆ ತಿಳಿಸಿದ್ದಾರೆ.