ಬೆಂಗಳೂರು: ಕ್ಷೀಣಿಸುತ್ತಿರುವ ಗ್ರಾಮೀಣ ಕ್ರೀಡೆಗಳ ಪುನಶ್ಚೇತನಕ್ಕೆ ಯುವಕರು ಪಣ ತೊಡಬೇಕು. ಕಬಡ್ಡಿ ಆಡಲು ಯುವಕರು ಮುಂದಾಗಬೇಕು. ಆಟದಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಕಬಡ್ಡಿ ಭಾರತದ ಹೆಮ್ಮೆಯ ಕ್ರೀಡೆಯಾಗಿದೆ. ಗ್ರಾಮೀಣ ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ ಜಾನಪದ ಎಸ್ ಬಾಲಾಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕನ್ನಡ ಜಾನಪದ ಪರಿಷತ್ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಬ್ಯಾಟರಾಯನಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ರಂಗೋಲಿ ಮತ್ತು ಕಬಡ್ಡಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಉತ್ತಮ ಆರೋಗ್ಯ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯವಿದ್ದು, ಶಾಲೆ, ಕಾಲೇಜುಗಳಲ್ಲಿ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಕನ್ನಡ ಜಾನಪದ ಪರಿಷತ್ ರಾಜ್ಯದಾದ್ಯಂತ ನಶಿಸುತ್ತಿರುವ ಜನಪದ ಸಂಸ್ಕೃತಿ, ಪರಂಪರೆ ಮತ್ತು ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೆಲಸ ನಿರ್ವಹಿಸುತ್ತಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೆಚ್ಚಿನ ಅಸಕ್ತಿಯನ್ನು ಬೆಳೆಸಿಕೊಂಡು ಜನಪದ ಮತ್ತು ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಕಬಡ್ಡಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿನಿಯರು ಬಣ್ಣ ಬಣ್ಣದ ರಂಗೋಲಿ ಬಿಡಿಸಿದರು. ನಂತರ ನಡೆದ ಕಬಡ್ಡಿ ಸ್ಪರ್ಧೆಯಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಡಾ. ರಿಯಾಜ್ ಪಾಷಾ, ಬ್ಯಾಟರಾಯನಪುರ ಕನ್ನಡ ಜಾನಪದ ಪರಿಷತ್ ಗೌರವಾಧ್ಯಕ್ಷ ಆನಂದ್ ಬಿ. ಆರ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹೇಂದ್ರ ಭೀ ಜಾದವ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ, ಶಾಲಾ ಮುಖ್ಯೋಪಾಧ್ಯಾಯರು. ದೈಹಿಕ ಶಿಕ್ಷಕರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.