ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ಮುಡಾ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಪ್ರತಿಭಟನಾಕಾರರು ಯತ್ನಿಸಿದಾಗ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.ಕಾವೇರಿ ಬಳಿಯೇ ಇರುವ ಕುಮಾರಕೃಪಾ ಅತಿಥಿಗೃಹದ ಬಳಿಯೇ ಪ್ರತಿಭಟನಾಕಾರರನ್ನು ತಡೆಯಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟು, ನೂಕಾಟವೂ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಪ್ರಮುಖರಾದ ಸಿಟಿ. ರವಿ, ಆರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ಸುನೀಲ್ ಕುಮಾರ್ ಮೊದಲಾದವರು ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.
ಪ್ರತಿಭಟನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕುಮಾರಕೃಪಾ ಅತಿಥಿಗೃಹದ ಬಳಿಯೇ ಬ್ಯಾರಿಕೇಡ್ಗಳನ್ನು ಅಳವಡಿಸಿ 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಬಂಧನದ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನಕ್ಕೊಂದು ಹಗರಣ ನಡೆಯುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಜತೆಗೆ ಬೇರೆ ನಿಗಮದಲ್ಲೂ ಹಗರಣ ನಡೆದಿದೆ. ಮೈಸೂರು ಮುಡಾದಲ್ಲಿ ನಡೆದಿರುವ ಹಗರಣ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಯವರಿಗೆ ತಿಳಿದಿತ್ತು. ಅವರಿಬ್ಬರ ಬಗ್ಗೆ ಶಂಕೆ ಮೂಡುತ್ತಿದೆ ಎಂದು ದೂರಿದರು.ಆರ್. ಅಶೋಕ್ ಮಾತನಾಡಿ, ಈ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದೆ. ರಾಮೇಶ್ವರ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಹಿಡಿಯಲು ಪೊಲೀಸರನ್ನು ಬಿಡುತ್ತಿಲ್ಲ ಎಂದು ಆರೋ ಪಿಸಿದ್ದಾರೆ. ಸರ್ಕಾರದ ವಿರುದ್ಧ ನಮ್ಮ ಹೋರಾಟವನ್ನು ವಿಧಾನಸಭೆ, ವಿಧಾನಪರಿಷತ್ನಲ್ಲೂ ಮುಂದುವರಿಸುವುದಾಗಿ ತಿಳಿಸಿದರು.