ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್ನಲ್ಲಿ ನಿನ್ನೆ ಘಟನಾವಳಿಗಳು ಹಾಗೂ ನಂತರ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನದ ನಂತರದ ಬೆಳವಣಿಗೆಗಳನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಅವರು, ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ ಎಂದು ಪ್ರಶ್ನಿಸಿದ್ದಾರೆ.
ಗೌರವಾನ್ವಿತ ಸಚಿವೆ ಬಗ್ಗೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ ಎಂದು ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ‘ಬಂಡೆ’ ಬೆಂಬಲವಿದೆ ಎಂದೇ ಅರ್ಥ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.
ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.