ಬೆಂಗಳೂರು: ಪರಿಶಿಷ್ಟರು, ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕೆ ಸ್ಥಾಪಿಸಲಾಗಿರುವ ಹಲವು ನಿಗಮ ಮಂಡಳಿಗಳಿಗೆ ಬಿಡಿಗಾಸೂ ಅನುದಾನ ಇಲ್ಲದೆ, ಕೆಲವು ನಿಗಮಗಳಿಗೆ ಪುಡಿಗಾಸು ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ನಾಡಿನ ಜನತೆಗೆ ದ್ರೋಹ ಬಗೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಇದೇನಾ ನಿಮ್ಮ ಸಾಮಾಜಿಕ ನ್ಯಾಯ? ಇದೇನಾ ಬಡವರು, ಪರಿಶಿಷ್ಟರು, ಹಿಂದುಳಿದವರ ಬಗ್ಗೆ ತಮಗಿರುವ ಕಾಳಜಿ? ಇದೇನಾ ಗಾಂಧಿ ಭಾರತ ನಿರ್ಮಿಸುವ ಪರಿ ಎಂದು ಪ್ರಶ್ನಿಸಿದ್ದಾರೆ. ಅಹಿಂದ ಹೆಸರಿನಲ್ಲಿ ಜನರಿಗೆ ವಿಶ್ವಾಸದ್ರೋಹ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.