ನವದೆಹಲಿ: ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತಾದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಡಾ. ಬಿ.ಆರ್. ಅಂಬೇಡ್ಕರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬಿ.ಆರ್ ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ, ದಲಿತ ಮತ್ತು ಹಿಂದುಳಿದ ಸಮುದಾಯಗಳನ್ನು ನಿರ್ಲಕ್ಷಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ಅಂಬೇಡ್ಕರ್ ಅವರ ಚುನಾವಣಾ ಸೋಲಿಗೆ ಕಾಂಗ್ರೆಸ್ ಸಂಚು ರೂಪಿಸಿತ್ತು. ಅವರ ಗೌರವಾರ್ಥ ಸ್ಮಾರಕಗಳನ್ನು ಸ್ಥಾಪಿಸಲು ಕಾಮಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಆದರೆ, ಬಿಜೆಪಿ ಸದಾ ಅಂಬೇಡ್ಕರ್ ತತ್ವಗಳನ್ನು ಗೌರವಿಸಿದೆ. ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಮಹತ್ವದ ತಾಣಗಳಾದ ‘ಪಂಚತೀರ್ಥ’ವನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಅಂಬೇಡ್ಕರ್ ಅವರ ಪರಂಪರೆಯನ್ನು ಗೌರವಿಸಲು ಬಿಜೆಪಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನದಲ್ಲಿ ತಿದ್ದುಪಡಿ ಮಾಡಿತು. ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ಸೇರಿಸಿತು. ಇದು ಅಂಬೇಡ್ಕರ್ ಅವರ ಮೂಲ ದೃಷ್ಟಿಯ ಭಾಗವಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ವಾದಿಸಿದ್ದಾರೆ. ಇದಲ್ಲದೆ, ದಲಿತರು ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಮೇಲಕ್ಕೆತ್ತಲು ಬಿಜೆಪಿ ಸತತವಾಗಿ ಕೆಲಸ ಮಾಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.