ಕಾನ್ಪುರ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಮುಂದೆ ಮುಖದ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಂತರ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ(ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.
ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್ನ ಹೋಟೆಲ್ಗೆ ಕರೆದೊಯ್ದು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಮಹೇಶ್ ಕುಮಾರ್ ಅವರು ಹೇಳಿದ್ದಾರೆ.
ಬಜರಂಗಿ ತನ್ನ ಅಶ್ಲೀಲ ವಿಡಿಯೋಗಳನ್ನೂ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಸಹ ಮಹಿಳೆ ಆರೋಪಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ ಎಫ್ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆ ಆರಂಭಿಸಿದ್ದರು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಬಜರಂಗಿ ಅವರು ತಲೆಮರೆಸಿಕೊಂಡಿದ್ದರು.
ಸೋಮವಾರ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ಆಗಮಿಸಿ, ಪ್ರತಿಭಟಿಸಿದರು. ಇದೇ ವೇಳೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ಮಾಡುವಾಗ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ಪೊಲೀಸ್ ಠಾಣೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜರಂಗಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.