ಲಖನೌ: ಕಾಲ್ತುಳಿತದಿಂದ 120ಕ್ಕೂ ಹೆಚ್ಚು ಜನರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಹತ್ರಾಸ್ನಲ್ಲಿ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹತ್ರಾಸ್ಗೆ ಭೇಟಿ ನೀಡಿದ್ದಾರೆ.
ನಿನ್ನೆ ತಡರಾತ್ರಿ ಸಿಕಂದರ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ ‘ಮುಖ್ಯ ಸೇವಾದಾರ’ ದೇವಪ್ರಕಾಶ್ ಮಧುಕರ್ ಮತ್ತು ಇತರ ಸಂಘಟಕರನ್ನು ಹೆಸರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 105, 110, 126 (2), 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ 238 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. 24 ಗಂಟೆಯೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.ನಿನ್ನೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ನಮ್ಮ ಸರ್ಕಾರವು ಈ ಘಟನೆಯ ತಳದಿಂದ ಕಾರಣಗಳನ್ನು ತಿಳಿದುಕೊಂಡು ಸಂಚುಕೋರರು ಮತ್ತು ಹೊಣೆಗಾರರಿಗೆ ಸೂಕ್ತ ಶಿಕ್ಷೆಯನ್ನು ನೀಡುತ್ತದೆ. ರಾಜ್ಯ ಸರ್ಕಾರವು ಈ ಸಂಪೂರ್ಣ ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ. ಇದು ಆಕಸ್ಮಿಕ ಘಟನೆಯೋ, ಪಿತೂರಿಯೋ ಎಂದು ನೋಡುತ್ತಿದ್ದೇವೆ ಎಂದರು.
ದುರಂತ ಘಟನೆಯ ಬಗ್ಗೆ ರಾಜಕೀಯವಾಗಿ ಮಾತನಾಡುವುದು ಸರಿಯಲ್ಲ ಎಂದು ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಂತಹ ಘಟನೆಯಲ್ಲಿ ರಾಜಕೀಯ ಮಾಡುವುದು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ಸಮಯವಿದು. ಪರಿಸ್ಥಿತಿ ಸೂಕ್ಷ್ಮವಾಗಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.
ಹತ್ರಾಸ್ ಜಿಲ್ಲೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಆಘಾತ ಕೇಂದ್ರದ ಹೊರಗೆ ಸಂತ್ರಸ್ತರು.ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾರಾಯಣ ಸಕರ್ ವಿಶ್ವ ಹರಿ ಎಂದು ಪ್ರಸಿದ್ಧರಾದ ಭೋಲೆ ಬಾಬಾ ಅವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು. ಜಿಲ್ಲಾಡಳಿತ ನೀಡಿದ್ದ ಅನುಮತಿಗಿಂತ ಹೆಚ್ಚಿನ ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಇಂತಹ ಭೀಕರ ದುರಂತದಲ್ಲಿ, ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಕಾಲ್ತುಳಿತದಲ್ಲಿ 116 ಭಕ್ತರು ಉಸಿರುಗಟ್ಟಿ ಮೃತಪಟ್ಟಿದ್ದರು. ಇಂದು ಸಾವಿನ ಸಂಖ್ಯೆ 124ಕ್ಕೇರಿದೆ.