ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಮುಗಿದ ನಂತರ ಇದೀಗ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿವೆ. ಇದರೊಂದಿಗೆ ಕಣಿವೆಯಲ್ಲಿ ಆರು ವರ್ಷಗಳಿಂದ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಈಗ ಹಿಂಪಡೆಯಲಾಗಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ.
ಅದು 49 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 29 ಸ್ಥಾನಗಳನ್ನು ಗೆದ್ದಿದೆ.10 ವರ್ಷಗಳ ಹಿಂದೆ 2014ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿತ್ತು. ಚುನಾವಣೆಯ ನಂತರ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದವು. ಆದರೆ 2018 ರಲ್ಲಿ, ಬಿಜೆಪಿ ತನ್ನ ಬೆಂಬಲವನ್ನು ಹಿಂತೆಗೆದುಕೊಂಡ ನಂತರ, ಸರ್ಕಾರ ಪತನಗೊಂಡಿತು ಮತ್ತು ಮೆಹಬೂಬಾ ಮುಫ್ತಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಅದನ್ನು ಈಗ ತೆಗೆದುಹಾಕಲಾಗಿದೆ.