ಬೆಂಗಳೂರು: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ xxx, ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರಿಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. ಆಗಿದೆ. 2014ರಲ್ಲಿ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು.
ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಇದುವರೆಗೆ ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಿಲ್ಲ. ಸರ್ಕಾರದ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.