ಚಂಡೀಗಢ: ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.
ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಪಂಜಾಬ್ನ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಉಪವಾಸವು ಭಾನುವಾರ 27ನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿ “ಚಿಂತಾಜನಕ”ವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಎಕ್ಸ್ನಲ್ಲಿ ಪಂಜಾಬ್ ಸಿಎಂ ಪೋಸ್ಟ್ ಮಾಡಿದ್ದಾರೆ.
“ಮೋದಿ ಜಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿ ಕುಳಿತಿರುವ ರೈತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ನೀವು ಯಾವ ಸಮಯಕ್ಕಾಗಿ ಕಾಯುತ್ತಿದ್ದೀರಿ?” ಎಂದು ಮಾನ್ ಪ್ರಶ್ನಿಸಿದ್ದಾರೆ.
ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.