ಬೆಂಗಳೂರು: ರಾಜ್ಯದ ಜನತೆಯ ಆರ್ಥಿಕ ಸಾಮಾಜಿಕ, ಶೈಕ್ಷಣಿಕ ಪ್ರಗತಿಯ ಧ್ಯೇಯದೊಂದಿಗೆ ೫ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿ ಅನುಷ್ಠಾನಗೊಳಿಸುವ ಮೂಲಕ ಸಾಮಾಜಿಕ ಬದ್ಧತೆಗೆ ಆದ್ಯತೆ ನೀಡಿ ಜನ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಮಾಜಿ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ತಿಳಿಸಿದರು.
ಉಲ್ಲಾಳು ಮುಖ್ಯ ರಸ್ತೆಯ ಮಲ್ಲತ್ತಹಳ್ಳಿಯಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಕಾರ್ಯಗಾರ ಹಾಗೂ ಸಂಧ್ಯಾ ಸುರಕ್ಷತೆ, ವಿಧವಾ ವೇತನ, ವಿಶೇಷ ಚೇತನ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಾತಿ, ಧರ್ಮ ಆಧಾರದಲ್ಲಿ ರಾಜಕೀಯ ಮಾಡುವ ಬಿಜೆಪಿ ಪಕ್ಷದವರು, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ ತಾರತಮ್ಯವೆಸಗಿ ಒಕ್ಕೂಟ ವ್ಯವಸ್ಥೆಯನ್ನ ದುರ್ಬಲಗೊಳಿಸಿದ್ದಾರೆ ಎಂದು ದೂರಿದರು.
ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಜೆ ಮಾತನಾಡಿ ರಾಜ್ಯ ಸರಕಾರದ ಜನಪರ ಯೋಜನೆಗಳನ್ನ ಜನತೆಗೆ ತಲುಪಿಸುವ ಉದ್ದೇಶದಿಂದ ಕಾರ್ಯಗಾರ ಹಮ್ಮಿಕೊಂಡು ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ರಾಜ್ಯ ಸರ್ಕಾರದ ಯೋಜನೆ ತಲುಪಿಸಲು ಮನೆ ಮನೆಗೆ ತೆರಳಿ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರಗತಕ್ಷಣ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಶೀಘ್ರದಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಾರ್ಮಿಕರು ತಪಾಸಣೆಗೆ ಒಳಪಡಿಸಿಕೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು. ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಪಶ್ಚಿಮ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಹನುಮಂತರಾಯಪ್ಪ, ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ , ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಾಧಿಕಾರದ ಅಧ್ಯಕ್ಷ ರಾಂಪುರ ನಾಗೇಶ್, ಮುಖಂಡರಾದ ಲತಾ ದಿನೇಶ್, ರಮೇಶ್ ಗೌಡ ಅನಿಲ್ ಕುಮಾರ್ ಎಂವಿ ಮುಂತಾದವರು ಉಪಸ್ಥಿತರಿದ್ದರು. ಬಿಪಿಎಲ್ ಕಾರ್ಡ್ ಹೊಂದಿದ್ದ ನೂರಾರು ಕುಟುಂಬದ ಸದಸ್ಯರಿಗೆ ಉಚಿತವಾಗಿ ಗ್ಯಾಸ್ ಸ್ಟವ್ ವಿತರಿಸಲಾಯಿತು.