ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರ ಮಹತ್ವದ ಸಮಾಲೋಚನೆ ಸಭೆ ನಡೆಯಲಿದೆ.ಇಂದು ಸಂಜೆ 6 ಗಂಟೆಗೆ ನಗರದ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಬಿಜೆಪಿಯ ಆರ್.ಅಶೋಕ್, ಅಶ್ವಥನಾರಾಯಣ್, ಜೆಡಿಎಸ್ನ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.
ನಿನ್ನೆ ಯೋಗೀಶ್ವರ್ ಮತ್ತು ಜೆಡಿಎಸ್ ನಾಯಕರ ನಡೆದ ಸಂಧಾನ ಸಭೆ ಫಲಪ್ರದವಾಗಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಭೆಯಲ್ಲಿ ಎನ್ಡಿಎ ಅಭ್ಯರ್ಥಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರ ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.ಚನ್ನಪಟ್ಟಣಕ್ಕೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕ್ಷೇತ್ರದ ಜಿಲ್ಲಾ ಪರಿಷತ್ ಮತ್ತು ನಗರಸಭೆ ಪ್ರಮುಖರೊಂದಿಗೂ ಬೆಂಗಳೂರು ಸಲಹಾ ಸಭೆ ಕರೆದಿದ್ದಾರೆ.
ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಲೇಜೊಂದರಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ನಾನು ಅವರ ತಿಳುವಳಿಕೆ ಮತ್ತು ಸಲಹೆಗಳನ್ನು ಪಡೆಯಬೇಕಾಗುತ್ತದೆ. ಇಂದಿನ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲು ವರಿಷ್ಠರಿಗೆ ವರದಿ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು.