ನವದೆಹಲಿ: 1961ರ ಚುನಾವಣಾ ನಿಯಮಗಳಿಗೆ ಇತ್ತೀಚಿಗೆ ಮಾಡಲಾದ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ ಮತ್ತು ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಸಹಾಯ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.
ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವಿಡಿಯೋ ರೆಕಾರ್ಡಿಂಗ್ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಕೇಂದ್ರ ಸರ್ಕಾರ ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿದೆ.
ಇಂದು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ‘ಚುನಾವಣಾ ಪ್ರಕ್ರಿಯೆಯ ಸಮಗ್ರತೆಯು ಅತ್ಯಂತ ವೇಗವಾಗಿ ಕುಸಿಯುತ್ತಿದೆ. ಅದನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಸಹಾಯ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.
‘ಚುನಾವಣಾ ನಿಯಮಗಳು, 1961 ರ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಇದೀಗ ರಿಟ್ ಅರ್ಜಿ ಸಲ್ಲಿಸಲಾಗಿದೆ’ ಎಂದು ಜೈರಾಮ್ ರಮೇಶ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗವು ಏಕಪಕ್ಷೀಯವಾಗಿ ಮತ್ತು ಸಾರ್ವಜನಿಕ ಸಮಾಲೋಚನೆಯಿಲ್ಲದೆ ಇಂತಹ ಮಹತ್ವದ ಕಾನೂನನ್ನು ಲಜ್ಜೆಗೆಟ್ಟ ರೀತಿಯಲ್ಲಿ ತಿದ್ದುಪಡಿ ಮಾಡಲು ಅನುಮತಿ ನೀಡುವುದಿಲ್ಲ ಎಂದು ರಮೇಶ್ ಹೇಳಿದ್ದಾರೆ.