ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರು ಹಾಗೂ ಶಿಶುಗಳ ಸಾವು ಪ್ರಕರಣ ನಮಗೂ ನಮಗೂ ಆತಂಕ, ನೋವು ತಂದಿದೆ. ಪ್ರಕರಣ ಸಂಬಂಧ ನಿಷ್ಪಕ್ಷವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲಾದೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ,
ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಲೋಕಾಯುಕ್ತ ತಂಡ ಬಳ್ಳಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಗೆ ಭೇಟಿ ನೀಡಿತು. ಇದೇ ವೇಳೆ ಮೃತ ಬಾಣಂತಿಯರ ಕುಟುಂಬ ಸದಸ್ಯರನ್ನು ಆರೋಗ್ಯ ಸಚಿವರು ಭೇಟಿಯಾಗಿ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರಂತವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರ ಸಂಬಂಧ ಚರ್ಚೆ ನಡೆಸಲಾಗುವುದು. ಕೂಲಂಕಷವಾಗಿ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಲೋಕಾಯುಕ್ತ ತಂಡವು ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ನಲ್ಲಿರುವ ಔಷಧ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದೆ. ತಾಯಂದಿರ ಸಾವಿನ ಕಾರಣಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿದ್ದು, ತಜ್ಞರ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.