ನವದೆಹಲಿ: ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ.
ಅನುಮತಿ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹಿಂದಿನ ಬಿಜೆಪಿ ಸರ್ಕಾರ, ಡಿಕೆ ಶಿವಕುಮಾರ್ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿತ್ತು.
ಡಿಕೆ ಶಿವಕುಮಾರ್ ವಿರುದ್ಧ ತನಿಖೆ ಪುನರಾರಂಭಿಸುವ ಸಂಬಂಧ ಸಿಬಿಐ ಇತ್ತೀಚೆಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ, ಡಿಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಶಿವಕುಮಾರ್ ಅವರು 2013 ಮತ್ತು 2018ರ ನಡುವೆ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಅವಧಿಯಲ್ಲಿ ಡಿಕೆಶಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. 2019ರ ಸೆಪ್ಟೆಂಬರ್ 25 ರಂದು ಬಿಜೆಪಿ ಸರ್ಕಾರವು ವಿಚಾರಣೆ ನಡೆಸಲು ನೀಡದ ಅನುಮತಿಯ ಆಧಾರದ ಮೇಲೆ ಸಿಬಿಐ 2020 ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ (ಡಿಎ) ಕೇಸ್ ದಾಖಲಿಸಿತ್ತು.