ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದಾರೆ. ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದರು.
ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರ, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಇದನ್ನು ನಿನ್ನೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದ್ದು, ಮಾನ್ಯ ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.
ಇದನ್ನು ಹೈಕೋರ್ಟಿನಲ್ಲೂ ಪ್ರಶ್ನಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ ಎಂದು ಕೇಳಿದರು.ಜ್ವ್ವಲಂತ ಸಮಸ್ಯೆಗಳ ಕುರಿತು ಚರ್ಚೆ9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ದರಿದ್ರ ಪರಿಸ್ಥಿತಿಗೆ ರಾಜ್ಯ ಸರಕಾರ ಬಂದಿದೆ. ಅನೇಕ ಜ್ವಲಂತ ಸಮಸ್ಯೆಗಳಿವೆ ಎಂದು ಬಿ.ವೈ. ವಿಜಯೇಂದ್ರ ಅವರು ಗಮನ ಸೆಳೆದರು.ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 9 ವಿವಿಗಳಲ್ಲಿ ಬಡವರ ಉನ್ನತ ಶಿಕ್ಷಣಕ್ಕೆ ಕತ್ತರಿ ಹಾಕುವ ಕೆಲಸಕ್ಕೆ ಸರಕಾರ ಕೈ ಹಾಕಿದೆ. ಹಿರಿಯ ಐಪಿಎಸ್ ಅಧಿಕಾರಿಯ ಮಗಳು 30-40 ಬಾರಿ ಹೊರದೇಶಕ್ಕೆ ಹೋಗಿ ಬಂದಿರುವುದು, ಬೆಂಗಳೂರಿನಲ್ಲಿ ರಾಜಾತಿಥ್ಯ ಕುರಿತು ಪ್ರಸ್ತಾಪ ಮಾಡುತ್ತೇವೆ ಎಂದರು.
ಒಂದು ಬಾರಿ 14 ಕೆಜಿ ಚಿನ್ನ ತಂದಿದ್ದರೆ, 30-40 ಬಾರಿ ಎಷ್ಟು ಚಿನ್ನ ತಂದಿರಬಹುದು ಎಂದು ಕೇಳಿದರು. ಇದರ ಹಿಂದೆ ಸಚಿವರು, ಘಟಾನುಘಟಿಗಳ ಕೈವಾಡ ಇದೆ ಎಂಬ ಮಾತು ಕೇಳಿಬರುತ್ತಿದೆ ಎಂದರು.
ಶಾಸಕ ಸೋಮಶೇಖರ್ ಅವರು ಯಾಕೆ ಸರಕಾರದ ಪರವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ. ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡು ಕೇಂದ್ರದ ವರಿಷ್ಠರಿಗೆ ಕಳುಹಿಸಿದೆ. ಈ ಸಂಬಂಧ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.