ಬೆಂಗಳೂರು: ಇತ್ತೀಚೆಗೆ ಮೆಟ್ರೋ ಪ್ರಯಾಣ ದರವನ್ನು ಏರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದನ್ನು ಮನಗಂಡಿರುವ ಸಿದ್ದರಾಮಯ್ಯ ಕೆಲ ಕಡೆ ಅಸಹಜ ರೀತಿಯಲ್ಲಿ ಏರಿಕೆಯಾಗಿರುವ ದರವನ್ನು ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದಿದ್ದಾರೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಟ್ವಿಟ್ನಲ್ಲಿ ವಿವರಿಸಿದ್ದಾರೆ.
ಬಿಎಂಆರ್ಸಿಎಲ್ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.ದರ ಏರಿಕೆಯಿಂದಾಗಿ ಪ್ರತಿನಿತ್ಯ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಬಹುತೇಕ ಮಂದಿ ಮೆಟ್ರೋದತ್ತ ಸುಳಿಯುತ್ತಿಲ್ಲ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್ ಎನ್ನುತ್ತಿದ್ದಾರೆ. ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% ರಿಂದ 40% ರಷ್ಟು ಕಡಿಮೆಯಾಗಿದೆ.