ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ದಂಡು ದಂಡಾಗಿ ಹೊರಟಿದ್ದಾರೆ.
ಇಂದು ಬೆಳಿಗ್ಗೆ ಚನ್ನಪಟ್ಟಣ ರೈಲ್ವೇ ನಿಲ್ದಾಣದ ಬಳಿ ಜೆಡಿಎಸ್ ಅಭ್ಯರ್ಥಿ ನಿಖಿಲ್ಕುಮಾರಸ್ವಾಮಿ ಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಹಿರಂಗ ಪ್ರಚಾರಕ್ಕೆ ತೆರೆಬೀಳುವುದಕ್ಕೂ ಮೊದಲು ಬೃಹತ್ ಸಮಾವೇಶ ನಡೆಸಲಿದ್ದಾರೆ. ಚನ್ನಪಟ್ಟಣದ ದೊಡ್ಡಮಳೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಚನ್ನಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಂದು ಜಂಟಿಯಾಗಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಜೆಡಿಎಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.