ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಜಟಾಪಟಿ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ದೆಹಲಿ ರಾಜ್ಯದ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಇದೇ ಸರಿಯಾದ ಸಂದರ್ಭ ಎಂಬುದನ್ನು ಅರಿತಿರುವ ಬಿಜೆಪಿ ನಾಯಕರುಗಳು, ದೆಹಲಿ ತಲುಪಿದ್ದಾರೆ.
ನಿನ್ನೆ ಮಧ್ಯಾಹ್ನ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಜಯೇಂದ್ರರ ವಿರೋಧಿ ಬಣದಲ್ಲಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ದೆಹಲಿ ತಲುಪಿದ್ದಾರೆ.ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಕೂಡ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಂಜೆಯ ವೇಳೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಬಿಜೆಪಿಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ರಾಮುಲು ವಿರುದ್ಧ ಗುಡುಗಿದ್ದು, ಅದರ ಬಗ್ಗೆ ಹೈಕಮಾಂಡ್ ನಾಯಕರ ಜೊತೆಗೆ ಸಮಾಲೋಚನೆ ನಡೆಸಲು ರಾಮುಲು ತೆರಳಿದ್ದಾರೆ.
ಇನ್ನು ರಾಜ್ಯದಲ್ಲಿ ಶತಾಯಗತಾಯ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಆಗಲೇಬೇಕೆಂದು ಯತ್ನಾಳ್ ಅಂಡ್ ಟೀಂ ಹಠಕ್ಕೆ ಬಿದ್ದಿದ್ದು, ಇದರ ಬೆನ್ನಲ್ಲೇ ವಿಜಯೇಂದ್ರ ಕೂಡ ತಮ್ಮ ಸ್ಥಾನ ಗಟ್ಟಿ ಮಾಡಿಕೊಳ್ಳಲು ದೆಹಲಿಗೆ ತೆರಳಿದ್ದಾರೆ.