ದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ರೇಖಾಗುಪ್ತಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಗುಪ್ತ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದರು. ಇಂದು ಮಧ್ಯಾಹ್ನ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರೇಖಾ ಗುಪ್ತಾ ಅವರಿಗೆ ಲೆಫ್ಟಿನೆಂಟ್ ಗೌರ್ನರ್ ವಿ.ಕೆ.ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು.
ಇದೇ ಸಂದರ್ಭದಲ್ಲಿ ಕೆಲವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿದ್ದು, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶಾಲೀಮಾರ್ ಬಾಗ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿದ್ದರು.