ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರ ವಿರುದ್ಧ ಸರ್ಕಾರದ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
೬೯ನೇ ಕನ್ನಡ ರಾಜ್ಯೋತ್ಸವ
ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ಮತ್ತು ಕನ್ನಡಿಗರ ಅವಹೇಳನ ಮಾಡುವುದು, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕಕ್ಕೆ ೧೫ನೇ ಹಣಕಾಸಿನ ಆಯೋಗದಲ್ಲಿ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ. ಕೇಂದ್ರದ ಅನುದಾನದ ವಿಚಾರದಲ್ಲಿ ಕರ್ನಾಟಕಕ್ಕೆ ತಾರತಮ್ಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿದೆ. ಆದರೂ ನಾವು ಶಾಲಾ ಕಾಲೇಜು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ವಾರಕ್ಕೆ ೬ ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ ೫೭ ಲಕ್ಷ ಮಕ್ಕಳಿಗೆ ಮೊಟ್ಟೆ ನೀಡುತ್ತಿದ್ದೇವೆ ಎಂದರು. ಸಾಯಿ ಅನ್ನಪೂರ್ಣ ಟ್ರಸ್ಟ್ ವಾರದಲ್ಲಿ ೩ದಿನ ರಾಗಿ ಮಾಲ್ಟ್ ನೀಡುತ್ತಿದೆ. ಅಪೌಷ್ಟಿಕತೆ ದೂರ ಮಾಡಲು ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ಅಪೌಷ್ಟಿಕತೆ ದೂರ ಮಾಡಲು ಸಾಕಷ್ಟು ಯೋಜನೆ ಹಮ್ಮಿಕೊಂಡಿದ್ದೇವೆ ಎಂದರು.
ನಾವು ರಾಜ್ಯಕ್ಕೆ ನ್ಯಾಯಯುತವಾಗಿ ತೆರಿಗೆ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಯತ್ನ ಮಾಡಬೇಕಾಗಿದೆ. ರಾಜ್ಯದಿಂದ ಆಯ್ಕೆಯಾದ ಎಂಪಿಗಳು ಲೋಕಸಭೆಯಲ್ಲಿ ಧ್ವನಿ ಎತ್ತಬೇಕಿದೆ. ರಾಜ್ಯಸಭಾ ಸದಸ್ಯರೂ ತೆರಿಗೆ ಪಾಲು ಕೊಡಿ ಎಂದು ಕೇಳಬೇಕು. ಆ ರೀತಿಯ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಮಕ್ಕಳಿಗೆ ಯೋಜನೆಗಳನ್ನು ರೂಪಿಸಿದ್ದಾರೆ. ವಾರದಲ್ಲಿ ಆರು ದಿನ ಮೊಟ್ಟೆ ಕೊಡುತ್ತೇವೆ. ಚಿಕ್ಕಿ, ಬಾಳೆ ಹಣ್ಣು ಕೊಡುತ್ತಿದ್ದೇವೆ. ದಿನ ೫೭ ಲಕ್ಷ ಮಕ್ಕಳಿಗೆ ಮೊಟ್ಟೆ ಕೊಡುತ್ತಿದ್ದೇವೆ. ನಮ್ಮ ದೇಶದಲ್ಲಿ ಬಡತನ ಇದೆ, ಬಡವರ ಮಕ್ಕಳಲ್ಲಿ ಅಪೌಷ್ಟಿಕತೆ ಇದೆ. ಹೀಗಾಗಿ ಗುಣಮಟ್ಟದ ಆಹಾರ ಸಿಗಬೇಕು ಎಂದು ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದರು.
ಕನ್ನಡ ದೀವಿಗೆ ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಕ್ಕಳಿಗಾಗಿ ದೀವಿಗೆ ಬಿಡುಗಡೆ ಮಾಡಿದ್ದೇವೆ. ಎಲ್ಲರೂ ಕೂಡ ಕನ್ನಡ ಭಾಷೆ ಮಾತನಾಡಬೇಕು. ಭಾಷೆ ಕುರಿತು ದುರಾಭಿಮಾನ ಇರಬಾರದು, ಅಭಿಮಾನ ಇರಬೇಕು. ಕನ್ನಡ ಮಾತನಾಡಲು ಬರದೇ ಇರುವವರ ಬಳಿ ಬೇರೆ ಭಾಷೆ ಮಾತನಾಡಬಾರದು. ಕನ್ನಡವನ್ನೇ ಅವರಿಗೆ ಕಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಕನ್ನಡಿಗರ ಅವಹೇಳನ ಮಾಡುವವರ ವಿರುದ್ಧ ಸರ್ಕಾರದಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇವತ್ತು ಕನ್ನಡಿಗರಾಗುತ್ತೇವೆ ಎಂದು ಶಪಥ ಮಾಡಬೇಕು ಎಂದು ಹೇಳಿದರು.
ಶಾಲಾ ಮಕ್ಕಳ ಸಾಂಸ್ಕöÈತಿಕ ಕಾರ್ಯಕ್ರಮಗಳು ನಡೆದವು.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಾಲಾ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲೀನಿ ರಜನೀಶ್ ಮತ್ತಿತರರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.