ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ಇಂದು ಕೇಸರಿಮಯವಾಗಿದೆ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ.ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಪ್ರಮುಖ ಸಚಿವರು ಆಗಮಿಸಿದ್ದರು. ಅಲ್ಲದೆ, ವಿವಿಧ ರಾಜ್ಯಗಳ ಎನ್ಡಿಎ ಮುಖ್ಯಮಂತ್ರಿಗಳು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರಿ ಅಧಿಕಾರ ವಹಿಸಿಕೊಂಡರು.
ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಶಾಸಕರು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. 2020ರಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಸಂಘಟನಾ ಶಕ್ತಿ ಮತ್ತು ಹೋರಾಟವನ್ನು ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.
ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿತೀನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್, ಸುರೇಶ್ ಗೋಪಿ, ಸಿಎಂಗಳಾದ ಯೋಗಿ ಆದಿತ್ಯನಾಥ, ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗಾರಂಭ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಸೇರಿದಂತೆ ಐವರು ಪ್ರಮಾಣ ಸ್ವೀಕಾರ



