ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಳಿತು.
ಇದಕ್ಕೆ ಉತ್ತರಿಸಿದ ಕರ್ನಾಟಕ ಪರ ವಕೀಲರು, ರಾಜ್ಯ ಸರ್ಕಾರ 18, 171 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ರೂ. 3, 819 ಕೋಟಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಲು ಸ್ವಲ್ಪ ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠದ ಮುಂದೆ ಮನವಿ ಮಾಡಿದರು.
ನೀವೇ ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.
ಏಪ್ರಿಲ್ 29 ರಂದು ನಡೆದ ವಿಚಾರಣೆ ವೇಳೆಯಲ್ಲಿ ಬರ ಪರಿಹಾರವಾಗಿ ಕರ್ನಾಟಕ್ಕೆ ರೂ. 3,400 ಕೋಟಿ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಎನ್ ಡಿಆರ್ ಎಫ್ ಅಡಿಯಲ್ಲಿ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ನಿರ್ಧಾರ ರಾಜ್ಯದ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಕರ್ನಾಟಕ ಸರ್ಕಾರ ದೂರಿತ್ತು.
ರಾಜ್ಯ ತೀವ್ರ ರೀತಿಯ ಬರ ಪರಿಸ್ಥಿತಿ ಎದುರಿಸುತ್ತಿದೆ. 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. 196 ತಾಲ್ಲೂಕುಗಳು ತೀವ್ರ ಬರ ಪರಿಸ್ಥಿತಿಗೆ ತುತ್ತಾಗಿದ್ದು, ಉಳಿದ 27 ತಾಲ್ಲೂಕುಗಳಲ್ಲಿ ಸಾಧಾರಣ ರೀತಿಯಲ್ಲಿ ಬರ ಪರಿಸ್ಥಿತಿಯಿದೆ ಎಂದು ಹೇಳಿತ್ತು.