ಚಿಕ್ಕಬಳ್ಳಾಪುರ: ಬಾಲಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತ ಮಾಡಲು ಜಿಲ್ಲೆಯ ವಿವಿಧೆಡೆ ದಾಳಿ ಮಾಡುವ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೆಚ್ಚಿನ ರಕ್ಷಣೆಯನ್ನು ಕೊಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಶ್ರಾಯದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ “ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸದ್ಯಸರ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ”ಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲಾ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕರ ತಪಾಸಣೆಯ ಪತ್ತೆಯು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಏಪ್ರಿಲ್ 2024ರಿಂದ ನವೆಂಬರ್ ಮಾಹೆಯ ವರಗೆ ಅನಿರೀಕ್ಷಿತ ಒಟ್ಟು 28 ಮಕ್ಕಳನ್ನು ಪತ್ತೆ ಹಚ್ಚಲಾಗಿದ್ದು ಅಂತಹ ಮಕ್ಕಳಿಗೆ ಸರ್ಕಾರದ ಪುನರ್ ವಸತಿ ಸೌಲತ್ತುಗಳನ್ನು ಜಿಲ್ಲಾಡಳಿತದ ವತಿಯಿಂದ ಕಲ್ಪಿಸಲಾಗಿದೆ ಹಾಗೂ ತಪ್ಪಿತಸ್ಥ ಕಾರ್ಖಾನೆ, ಮಳಿಗೆ, ಹೋಟೆಲ್ ಹಾಗೂ ಇತರ ಸಂಸ್ಥೆಗಳ ಮಾಲೀಕರ ವಿರೂದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.
ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸವಾರ್ಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕು ಎಂದರು
ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರೀಕನ ಕರ್ತವ್ಯವಾಗಿರುತ್ತದೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ ಬಂಧಿಸಬಹುದಾದ) ಅಪರಾಧವಾಗಿರುತ್ತದೆ.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20,000/- ರಿಂದ ರೂ 50,000/-ಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.
ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ ರೂ. 20,000/-ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು.ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರೀಕನ ಕರ್ತವ್ಯವಾಗಿರಬೇಕು ಎಂದು ತಿಳಿಸಿದರು.ಕಾರ್ಮಿಕ ಇಲಾಖೆ,ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸಂಘ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದವರು ಬಾಲಕಾರ್ಮಿಕರನ್ನು ಗುರ್ತಿಸಲು ನಡೆಸುವ ಅನಿರೀಕ್ಷಿತ ದಾಳಿಗಳ ವೇಳೆ ಪೋಲೀಸ್ ಇಲಾಖೆಯವರು ಸಂಬಂಧಪಟ್ಟ ಆಧಿಕಾರಿಗಳಿಗೆ ರಕ್ಷಣೆಯನ್ನು ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನ ಅಜ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶ್ ಕುಮಾರ್, ಕಾರ್ಮಿಕ ನಿರೀಕ್ಷಕಕಿ ಮಂಜುಳ, ಜೆ.ವಿ ಕಲಾವಣಿ, ಜಿಲ್ಲಾ ಕೈಗಾರಿಕಾ ಕೇಂದ್ರ ಸಹಾಯಕ ನಿರ್ದೇಶಕ ಶಾಜೀಯ ಖಾನಂ, ನಗರ ಸಭೆಯ ಅಧಿಕಾರಿ ಪಿ. ಉಮಾ ಶಂಕರ್, ದಿನಾ ದಯಾಳ್, ಬಚ್ಚಪನ್, ಇಂಟಿಗ್ರೆಟಿಡ್ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.