ಬೆಂಗಳೂರು: ಬಿಜೆಪಿಯಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷರ ವಿರುದ್ಧ ಸಮರ ಸಾರಿರುವ ಕೆಲ ಶಾಸಕರು, ಮುಖಂಡರು ತಮ್ಮ ಪಟ್ಟನ್ನು ದಿನದಿಂದ ದಿನಕ್ಕೆ ಬಿಗಿ ಗೊಳಿಸುತ್ತಿದ್ದಾರೆ. ತಮ್ಮ ವಿರುದ್ಧ ಸಾರಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಮನಗೊಳಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ.
ನಿನೆಯಷ್ಟೇ ದೆಹಲಿಗೆ ತೆರಳಿ ಪಕ್ಷದ ವರಿಷ್ಠ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ವಿರುದ್ಧ ಸಮರ ಸಾರಿರುವವರ ಬಗ್ಗೆ ದೂರು ನೀಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವಿಜಯೇಂದ್ರ ಮಾತ್ರ ಶಾ ಅವರು ತಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಲು ಫೆ.10ರವರೆಗೆ ವಿಜಯೇಂದ್ರ ವಿರೋಧಿಗಳು ವರಿಷ್ಠರಿಗೆ ಗಡುವು ನೀಡಿದ್ದಾರೆ ಎಂದು ಹೇಳಲಾಗಿದೆ.
ವಿಜಯೇಂದ್ರರನ್ನು ಕೆಳಗಿಳಿಸಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಸಿ.ಟಿ.ರವಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.ಈ ಎಲ್ಲದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹೊಸ ವರ್ಷ ಆಚರಣೆ ನೆಪದಲ್ಲಿ ಮಲೇಷಿಯಾ ಪ್ರವಾಸ ಕೈಗೊಂಡಿದ್ದು, ಅಲ್ಲಿ ಮುಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಟ್ಟಾರೆ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಯಾವ ತಿರುವು ಪಡೆಯುತ್ತೆ ಎಂಬುದು ಕಾದು ನೋಡಬೇಕಾಗಿದೆ.