ಚಿಕ್ಕಮಗಳೂರು: ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಜೀವ ಬೆದರಿಕೆ ಹಾಕಿ ಅನಾಧೇಯ ಪತ್ರವೊಂದು ಬಂದಿದೆ.
ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
“ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುವುದು” ಎಂದು ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಅವರು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19 ರಂದು ವಿಧಾನ ಪರಿಷತ್ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.