ಮಂಡ್ಯ: ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ ವಿದ್ಯಾರ್ಥಿ ಪೃಥ್ವಿ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡಿ ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.