ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಆಹಾರ ಕೇಂದ್ರದಲ್ಲಿದ್ದ ಆಲೂಗೆಡ್ಡೆ ಸುಲಿಯುವ ಯಂತ್ರಕ್ಕೆ ‘ದುಪಟ್ಟಾ’ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ರಜನಿ ಖತ್ರಿ ಎಂದು ಗುರ್ತಿಸಲಾಗಿದೆ. ಮಹಿಳೆ ಭೋಜನಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಯ ದುಪಟ್ಟಾ ಆಲೂಗಡ್ಡೆ ಸುಲಿಯುವ ಯಂತ್ರದಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದರು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಲಕ್ಷ್ಮೀ ನಾರಾಯಣ ಗಾರ್ಗ್ ಅವರು ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದರೆ ನಿಖರ ಕಾರಣ ತಿಳಿಯಲಿದೆ ಎಂದು ತಿತಳಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಭೋಜನಶಾಲೆಯು ಮಹಾಕಾಳೇಶ್ವರ ದೇವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿದ್ದು, ದೇಗುಲಕ್ಕೆ ಬರುವ ಭಕ್ತರಿಗೆ ಇಲ್ಲಿ ಅನ್ನಸಂತರ್ಪಣೆ ಮಾಡಲಾಗುತ್ತದೆ.