ಮುಂಬೈ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 16 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.
ದಾಳಿಯ ವೇಳೆ ಉಗ್ರರ ವಿರುದ್ಧ ಹೋರಾಡಿ ತ್ಯಾಗ ಮಾಡಿದ ಹುತಾತ್ಮರಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಂಗಳವಾರ ಪುಷ್ಪನಮನ ಸಲ್ಲಿಸಿದ್ದಾರೆ.ಮುಂಬೈನ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿರುವ ಹುತಾತ್ಮ ಸ್ಮಾರಕದಲ್ಲಿ ಯೋಧರು ಮತ್ತು ಪೊಲೀಸರಿಗೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕೂಡ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ನವೆಂಬರ್ 26, 2008 ರಂದು ಮುಂಬೈನಲ್ಲಿ ನಡೆದ ಹೇಡಿತನದ ಭಯೋತ್ಪಾದನಾ ದಾಳಿಯ ವಾರ್ಷಿಕೋತ್ಸವದಂದು ಇಡೀ ರಾಷ್ಟ್ರದೊಂದಿಗೆ ಸೇರಿ ಪ್ರಾಣ ಕಳೆದುಕೊಂಡ ವೀರ ಹೃದಯಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ, ಕುಟುಂಬಗಳೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇನೆಂದು ಹೇಳಿದ್ದಾರೆ.
ಜನರ ಜೀವ ರಕ್ಷಿಸವ ಸಂದರ್ಭದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ಭಯೋತ್ಪಾದನೆಯನ್ನು ಎಲ್ಲಾ ರೂಪಗಳಲ್ಲಿ ಸೋಲಿಸಲು ಭಾರತ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದರಂತೆ ವೀರ ಯೋಧರಿಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.