ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಸಾಗರಪಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖೊಯೆರ್ತಲಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರನ್ನು ಸಕಿರುಲ್ ಸರ್ಕಾರ್ (32), ಮಾಮನ್ ಮೊಲ್ಲಾಹ್ (30) ಮತ್ತು ಮುಸ್ತಾಕಿನ್ ಶೇಖ್ (28) ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಘಟನೆ ವೇಳೆ ಗಾಯಗೊಂಡಿದ್ದ ಸಕಿರುಲ್ ಸರ್ಕಾರ್ ಮತ್ತು ಮಾಮನ್ ಮೊಲ್ಲಾಹ್ ಅವರನ್ನು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಗಿತ್ತು. ಆದರೆ, ಇಬ್ಬರೂ ದಾರಿ ಮಧ್ಯೆಯೇ ಮೃತಪಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ. ಘಟನೆ ಬೆನಲ್ಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.