ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜಕೀಯ ಮುಖಂಡರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಮುಖಂಡರು ಪರಸ್ಪರ ವೈಯಕ್ತಿಕ ಆರೋಪಗಳನ್ನು ಮಾಡುವುದರಲ್ಲೇ ನಿರತರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರನ್ನು ಸಿಡಿ ಬ್ರರ್ಸ್ ಎಂದು ದೂರುವ ಮೂಲಕ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಮತ್ತು ಅಭ್ಯರ್ಥಿಯಾಗಿರುವ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಭಾವುಕರಾಗಿ ಮಾತನಾಡಿ ಕಣ್ಣೀರು ಹಾಕುವುದನ್ನು ಕಾಂಗ್ರೆಸ್ ಮುಖಂಡರು ಲೇವಡಿ ಮಾಡಿ ಮಾತನಾಡುತ್ತಿದ್ದಾರೆ.
ಇತ್ತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ವಿವಾದವನ್ನು ಲೇವಡಿ ಮಾಡುವ ಪೋಸ್ಟರ್ ಪ್ರದರ್ಶಿಸಿ ಮಾತನಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಸಂಸದ ಈ. ತುಕಾರಾಂ ಪಾತ್ರವೂ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಗಾಗಿ ಬಳಸಲಾಗಿದೆ ಎಂದು ದೂರಿದ್ದಾರೆ.
ಇದಕ್ಕೆ ಪ್ರತಿಯಾಗಿ ಬಿಜೆಪಿಯ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರ ಗಣಿ ಹಗರಣದ ಬಗ್ಗೆಯೂ ಪ್ರಸ್ತಾಪಿಸಿ ಪ್ರಚಾರ ನಡೆಸಲಾಗುತ್ತಿದೆ.
ಇತ್ತ ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಾಲದಲ್ಲಿ ಶಿಗ್ಗಾಂವಿ ಅಭಿವೃದ್ಧಿಗೆ ಏನು ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್ ದೂರುತ್ತಿದ್ದರೆ, ರಾಜ್ಯದಲ್ಲಿ ವಕ್ಫ್ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿಯವರು ದೂರುತ್ತಿದ್ದಾರೆ.
ಒಟ್ಟಾರೆ ಮೂರು ಕ್ಷೇತ್ರಗಳಲ್ಲಿ ಪಕ್ಷ ಪ್ರಣಾಳಿಕೆಗಳ ಬಗ್ಗೆ ಮಾತನಾಡುವುದು ಎಲ್ಲೂ ಕಂಡುಬರದೆ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳ ಭರಾಟೆಯೇ ಜೋರಾಗಿ ಕೇಳಿಬರುತ್ತಿದೆ.