ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಳಮಟ್ಟದಿಂದ ಕಾಂಗ್ರೆಸ್ಗೆ ಶಕ್ತಿ ತುಂಬಲು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರ ಅಗತ್ಯವಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ ಬಂದ ಮೇಲೆ ಈ ಬಗ್ಗೆ ಸುಳಿವು ಸಿಗಬಹುದು. ಅಧಿವೇಶನ ನಂತರ ದೆಹಲಿ ಹೋಗಿ ಬರುತ್ತೇನೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಣ್ಣ ಹುದ್ದೆಯಲ್ಲ. ಹೀಗಾಗಿ ಹೈಕಮಾಂಡ್ ಸೂಚನೆ ಬಂದ ಮೇಲೆ ಚರ್ಚೆ ಮಾಡಬೇಕಾಗುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದರ ಬಗ್ಗೆ ಚರ್ಚಿಸಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಧ್ಯಕ್ಷರಾಗಲು 3-4 ಜನ ರೇಸ್ನಲ್ಲಿ ಇದ್ದೇ ಇರುತ್ತಾರೆ. ಯಾರು ಪಕ್ಷಕ್ಕೆ ವೋಟ್ ತರುತ್ತಾರೆ, ಯಾರಿಗೆ ಮತ ಸೆಳೆಯುವ ಶಕ್ತಿ ಇದೆ ಅಂತವರಿಗೆ ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಉಪಚುನಾವಣೆ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಹಿನ್ನೆಲೆಯಲ್ಲಿ ಮುಂದಿನ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮೂಲಗಳು ತಿಳಿಸಿವೆ.
ಹಾವೇರಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ವಿರುದ್ಧ ಪಕ್ಷದ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರ ಗೆಲುವಿನಲ್ಲಿ ಸತೀಶ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಅಂಶವನ್ನು ಬೆಳಗಾವಿಯ ಹೆಚ್ಚಿನ ಕಾಂಗ್ರೆಸ್ ನಾಯಕರು ಒಪ್ಪಿಕೊಂಡಿದ್ದಾರೆ. ಇದಲ್ಲದೆ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಮಗಳು ಪ್ರಿಯಾಂಕಾ ಜಾರಕಿಹೊಳಿ ಗೆಲುವಿನಲ್ಲಿಯೂ ಸತೀಶ್ ಪ್ರಮುಖ ಪಾತ್ರ ವಹಿಸಿದ್ದರು.