ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಎಲ್ಲರ ಚಿತ್ತ ರಾಜ್ಯಪಾಲರತ್ತ ನೆಟ್ಟಿದೆ. ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ನಡೆಯಲಿದೆ ಎಂಬ ವ್ಯಾಪಕ ಚರ್ಚೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣ ಉಲ್ಲೇಖಿಸಿ ಕಾನೂನು ತಜ್ಞರು ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತುರ್ತು ಮಧ್ಯಸ್ಥಿಕೆ ವಹಿಸಬೇಕು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಒತ್ತಾಯಿಸಿದ್ದರು.ಕಳೆದ ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ರ ಸೆಕ್ಷನ್ ೨೧೮ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, ೧೯೮೮ ರ ಸೆಕ್ಷನ್ ೧೭ ಎ ಮತ್ತು ೧೯ ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ವಿಚಾರಣಾ ಅನುಮತಿ ನೀಡುವುದನ್ನು ತಡೆಯಲು ಕಸರತ್ತು ಮುಖ್ಯಮಂತ್ರಿಗಳ ವಿರುದ್ಧ ವಿಚಾರಣಾ ಅನುಮತಿ ನೀಡುವುದನ್ನು ತಡೆಯಲು ಮುಂದಿನ ಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲು ಸಂಪುಟ ಸದ್ದಿಲ್ಲದೆ ತಯಾರಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣ ಅನುಮತಿ ನೀಡದಂತೆ ಒಂದು ಸಾಲಿನ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಲಿದೆ. ಈ ಬಗ್ಗೆ ಈಗಾಗಲೇ ಕಾನೂನು ತಜ್ಞರಿಂದ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.