ರಾಯಚೂರು: ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಕರ್ನಾಟಕ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ. ಈ ಎಲ್ಲ ಪ್ರಕರಣಗಳ ತನಿಖೆ ನಡೆಯುತ್ತಿದೆ. ಇದರ ಮಧ್ಯೆಯೇ ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಗಾರಲದಿನ್ನಿ ಗ್ರಾಮದ ಈಶ್ವರಿ (32) ಮೃತ ಬಾಣಂತಿ. ಗರ್ಭಿಣಿ ಈಶ್ವರಿಯವರನ್ನು ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಡಿಸೆಂಬರ್ 8ರಂದು ಈಶ್ವರಿ ಅವರಿಗೆ ಹೆರಿಗೆಯಾಗಿತ್ತು.
ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದ ಬಳಿಕ ರಕ್ತಸ್ರಾವ, ಜ್ವರದಿಂದ ಬಳಲಿದ್ದರು. ಕೂಡಲೆ ಅವರನ್ನು ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಾಣಂತಿ ಈಶ್ವರಿ ಸಾವಿಗೆ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡದೆ ಹಾಗೂ ಸ್ಪಂದಿಸದೆ ಇರುವುದೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ ಒಟ್ಟು 10 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ.