ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸಾವು ಮುಂದುವರಿದಿದ್ದು, ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಳೆದ 3 ತಿಂಗಳಿನಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ 24 ವರ್ಷದ ಸರಸ್ವತಿ ಎಂಬುವವರು ಸಾವಿಗೀಡಾಗಿದ್ದಾರೆ. ಜನವರಿ 2ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜನವರಿ 5 ರಂದು ಕೊನೆಯುಸಿರೆಳೆದಿದ್ದಾರೆ.
ಸದ್ಯ ಮಗುವನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸರಸ್ವತಿ ಅವರು ನಾಲ್ಕನೇ ಮಗುವಿಗೆ ಜನ್ಮ ನೀಡಿ ಸಾವಿಗೀಡಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಸರಸ್ವತಿ ಅವರಿಗೆ ಹೆರಿಗೆ ಬಳಿಕ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರ ಮೃತಪಟ್ಟಿದ್ದಾರೆ ಎಂದು ರಿಮ್ಸ್ನ ವೈದ್ಯಕೀಯ ಅಧೀಕ್ಷಕ ಡಾ. ಭಾಸ್ಕರ್ ತಿಳಿಸಿದ್ದಾರೆ.
ರಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ.