ಬೆಂಗಳೂರು: ರೇವ್ ಪಾರ್ಟಿಯಲ್ಲಿ ಎಂಡಿಎಂಎ ಸೇವಿಸಿದ ಆರೋಪದಲ್ಲಿ ತೆಲುಗು ನಟಿ ಕೊಲ್ಲಾ ಹೇಮಾ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆಯಡಿ ನಗರ ಪೊಲೀಸರು ಆರಂಭಿಸಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತನ್ನ ವಿರುದ್ಧದ ಅಧೀನ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಹೇಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ಪ್ರಕರಣದ ವಿಚಾರಣೆ ವೇಳೆ ವಾದ ಮಂಡಿಸಿದ ಹೇಮಾ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆ ಆಧರಿಸಿ ಹೇಮಾ ವಿರುದ್ಧ, ಮಾದಕ ದ್ರವ್ಯ ನಿಗ್ರಹ ಕಾಯಿದೆ (ಎನ್ಡಿಪಿಎಸ್) ಸೆಕ್ಷನ್ 27 (ಬಿ) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆದರೆ, ಅವರು ಮಾದಕ ವಸ್ತು ಸೇವಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ಪುರಸ್ಕರಿಸಿದ ನ್ಯಾಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಅಂತೆಯೇ, ಮುಂದಿನ ವಿಚಾರಣೆಯ ತನಕ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.