ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಘಟನೆಗೆ ಹಲವು ಎಂಎಲ್ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
‘ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ?’ ಎಂದು ಕೇಳಿದರು.
ಈ ವಿಚಾರದಲ್ಲಿ ಬಿಜೆಪಿಯ ಹಿರಿಯ ನಾಯಕರ ನಡೆ ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆದ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಮುಕ್ತಾಯದ ದಿನದಂದು ಪರಿಷತ್ತಿನೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ರವಿ ಅವರನ್ನು ಬಂಧಿಸಲಾಯಿತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.