ದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪಕ್ಷದ ರಾಷ್ಟ್ರೀಯ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ಸಹಕಾರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಪ್ರಮುಖ ಪದಾಧಿಕಾರಿಗಳಾದ ಕೆ.ಸಿ.ವೇಣುಗೋಪಾಲ್ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದೇನೆ. ಖರ್ಗೆ ಅವರಿಗೆ ಪಕ್ಷದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ತೆರವಾಗಲಿರುವ ವಿಧಾನಪರಿಷತ್ ಸದಸ್ಯರ ಆಯ್ಕೆ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, ತಳ ಸಮುದಾಯದವರಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದೇನೆ.
ಅತಿ ಹಿಂದುಳಿದ ಸಮುದಾಯದವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ನೀಡಲು ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸಚಿವರನ್ನು ಭೇಟಿಯಾಗಿದ್ದೇನೆ. ಅನುದಾನ ನೀಡಲು ಒಪ್ಪಿಗೆ ನೀಡಿದ್ದಕ್ಕೆ ಕೇಂದ್ರ ಸಚಿವ ಸೋಮಣ್ಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. ಸಹಕಾರ ಇಲಾಖೆಗೆ ಅನುದಾನ ಬರಬೇಕಿದೆ. 5600 ಕೋಟಿ ಅನುದಾನ ನಿರೀಕ್ಷೆ ಮಾಡಲಾಗಿತ್ತು. ಆದರೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.