ಬೆಂಗಳೂರು: ಶಾಸಕ ಜಿ.ಮಂಜುನಾಥ್ ಅವರ ವಿರುದ್ಧದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.
ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಕೋಲಾರದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಮಂಜುನಾಥ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಈ ಆದೇಶ ನೀಡಿದ್ದಾರೆ.
ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದರೂ ಅಪರಾಧ ಕುರಿತು ಇನ್ನೂ ತನಿಖೆ ಮಾಡಿಲ್ಲ. 6 ವರ್ಷಗಳು ಕಳೆದಿವೆ. ಸುಪ್ರೀಂ ಕೋರ್ಟ್ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿದೆ. ಹೈಕೋರ್ಟ್ ಕೂಡ ಅರ್ಜಿಯನ್ನು ವಿಲೇವಾರಿ ಮಾಡುವಾಗ ಇದು ವಂಚನೆಗೆ ಸಮಾನ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಸುಳ್ಳು ಎಂಬ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸಿರುವುದು ಸ್ಪಷ್ಟವಾಗಿದೆ. ನಿಜವಾಗಿ ಪರಿಶಿಷ್ಟ ಜಾತಿಗೆ ಸೇರಿದ್ದವರಿಂದ ಕ್ಷೇತ್ರವನ್ನು ಕಸಿದುಕೊಂಡು ಶಾಸಕರೂ ಆಗಿರುವುದು ಸ್ಪಷ್ಟವಾಗಿದೆ. ಇದು ಅಪರಾಧ ಎಂದು ಹೇಳಿದರು.
ಕೊತ್ತೂರು ಜಿ. ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಅವರು ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆಗೊಳಪಟ್ಟಿತ್ತು. ಅಂತಿಮವಾಗಿ ಹೈಕೋರ್ಟ್ 2018ರಲ್ಲಿ ಮಂಜುನಾಥ್ ಅರ್ಜಿಯನ್ನು ವಜಾಗೊಳಿಸಿ ಅನರ್ಹಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿ, ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಬಹುದು ಎಂದು ಹೇಳಿತ್ತು.
ಅದರಂತೆ, ಜಿ. ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಅದನ್ನು ಮಂಜುನಾಥ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಬುಡಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರುತ್ತದೆ. ಆನಂತರ 2018ರಲ್ಲಿ ಮುಳಬಾಗಿಲು ಠಾಣೆಯಲ್ಲಿ ಮಂಜುನಾಥ್ ವಿರುದ್ಧ ನಕಲಿ, ವಂಚನೆ, ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು.